
ಮೈಸೂರು, ಆಗಸ್ಟ್ 29, 2023:
ಮೈಸೂರು ಕೆಡಿಪಿ ಸಭೆಯ ಮುಖ್ಯಾಂಶಗಳು
- ಇಲಾಖೆಗಳ ನಡುವೆ ಹೊಂದಾಣಿಕೆ ಇರಬೇಕು. ಬಹಳಷ್ಟು ಇಲಾಖೆಗಳ ನಡುವೆ ಅಂತರ್ ಸಂಬಂಧ ಇರುತ್ತದೆ. ಹೀಗಾಗಿ ಪರಸ್ಪರ ಹೊಂದಾಣಿಕೆಯಿಂದ ಸಮಸ್ಯೆಗಳನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಎಲ್ಲಾ ಇಲಾಖೆಗಳ ನಡುವೆ ಹೊಂದಾಣಿಕೆಯಿಂದ ತೀರ್ಮಾನ ತೆಗೆದುಕೊಳ್ಳುವಂತೆ ನೋಡಿಕೊಳ್ಳಬೇಕು.
- ನಾನು ಕೆಡಿಪಿ ಸಭೆ ಕರೆದಾಗ ರಾಜ್ಯ ಮಟ್ಟದ ಅಧಿಕಾರಿಗಳೂ ಸಭೆಗೆ ಬರಬೇಕು. ಸಭೆಗೆ ಆಹ್ವಾನ ಹೋದರೂ ಬರದಿದ್ದರೆ ಅಂತಹ ಅಧಿಕಾರಿಗಳ ಮೇಳೆ ಕ್ರಮ ಕೈಗೊಳ್ಳಲಾಗುವುದು.
- ಅಧಿಕಾರಿಗಳು ಪ್ರೋಟೋಕಾಲ್ ಪಾಲಿಸಬೇಕು. ಅಧಿಕಾರಿಗಳೇ ರಾಜಕೀಯ ಮಾಡಬಾರದು. ಚುನಾಯಿತ ಪ್ರತಿನಿಧಿಗಳು ಯಾವುದೇ ಪಕ್ಷದವರಾಗಿದ್ದರೂ ಸರ್ಕಾರದ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಪ್ರೋಟೋಕಾಲ್ ಪಾಲಿಸಬೇಕು.
ಕೃಷಿ ಸಂಬಂಧಿ ನೀಡಿದ ಸೂಚನೆಗಳು:
ರೈತರಿಗೆ ಒಮ್ಮೆ ಬೀಜಗಳನ್ನು ಒದಗಿಸಿಬಿಟ್ಟರೆ ತಮ್ಮ ಜವಾಬ್ದಾರಿ ಮುಗಿಯಿತು ಎಂದು ಕೃಷಿ ಅಧಿಕಾರಿಗಳು ಕೈಕಟ್ಟಿ ಕುಳಿತುಕೊಳ್ಳಬಾರದು. ಯಾವುದೇ ಕಾರಣದಿಂದ ಬೆಳೆ ನಷ್ಟವಾದರೆ ಮತ್ತೊಂದು ಸುತ್ತು ಬೀಜ ವಿತರಣೆ ಮಾಡಬೇಕು. ಪರ್ಯಾಯ ಬೆಳೆ ಬೆಳೆಯಲು ಅಗತ್ಯವಾದ ತಿಳಿವಳಿಕೆ ಮತ್ತು ಸವಲತ್ತುಗಳನ್ನು ಒದಗಿಸಬೇಕು. ಇಡೀ ಜಿಲ್ಲೆಯಲ್ಲಿ ಎಲ್ಲೇ ಬೀಜ-ಗೊಬ್ಬರದ ಕೊರತೆ ಬಗ್ಗೆ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಳ್ಳಿಗಳಿಗೆ ಹೋಗಿ ರೈತರ ಸಮಸ್ಯೆಗಳನ್ನು ಸಮಾಧಾನದಿಂದ ಕೇಳಿಸಿಕೊಳ್ಳಬೇಕು. ಬಳಿಕ ಸಮಸ್ಯೆ ಪರಿಹಾರ ಮಾಡಬೇಕು. ರೈತರ ಜತೆ ಗೌರವಯುತವಾಗಿ ನಡೆದುಕೊಳ್ಳಬೇಕು. ಕಚೇರಿಗೆ ಬರುವ ರೈತರ ಜತೆ ಆರೋಗ್ಯಕರವಾದ ನಡವಳಿಕೆ ಇಟ್ಟುಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳು ಇರುವುದೇ ರೈತರಿಗೆ ಮಾಹಿತಿ ಕೊಟ್ಟು ಸಹಕಾರ ಕೊಡುವುದಕ್ಕೆ. ರೈತರು ತಮ್ಮ ಅನುಭವದಿಂದಲೇ ಕೃಷಿಯಲ್ಲಿ ಪಳಗಿರುತ್ತಾರೆ. ಅಧಿಕಾರಿಗಳಿಗಿಂತ ಹೆಚ್ಚು ತಿಳಿವಳಿಕೆ ಹೊಂದಿದ್ದಾರೆ. ಆದ್ದರಿಂದ ರೈತರ ಮಾತು ಕೇಳಿಸಿಕೊಳ್ಳಬೇಕು, ಫೀಲ್ಡ್ ವಿಸಿಟ್ ಮಾಡಿ, ಡೈರಿ ಬರೆಯುವುದನ್ನು ರೂಢಿಕೊಳ್ಳಬೇಕು ಎಂದು ತಿಳಿಹೇಳಿದರು.
ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕೃಷಿ ಅಧಿಕಾರಿಗಳು ಅವರಿಗೆ ಮಾನವೀಯವಾಗಿ ಸ್ಪಂದಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಉದಾರವಾಗಿ ವರ್ತಿಸಿ. ಸರ್ಕಾರ ಹಣ ಕೊಡತ್ತೆ. ತಡ ಮಾಡದೆ ಪರಿಹಾರ ಅವರಿಗೆ ತಲುಪಬೇಕು. ಅನಗತ್ಯ ತಡ ಮಾಡಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಬೆಲೆ ನಷ್ಟ ಮತ್ತು ರೈತರ ಆತ್ಮಹತ್ಯೆಗಳ ಕುರಿತಾಗಿ ವಾಸ್ತವ ಸಂಗತಿಗಳು ಮತ್ತು ಕಾರಣಗಳನ್ನು ಪತ್ತೆ ಹಚ್ಚಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆತ್ಮಹತ್ಯೆಗಳಾಗಿದ್ದರೆ ಅದನ್ನೂ ನಮೂದಿಸಬೇಕು. ಆತ್ಮಹತ್ಯೆ ಹಿಂದಿನ ನೈಜ ಸಂಗತಿಯನ್ನು ಸ್ಪಷ್ಟವಾಗಿ ಗುರುತಿಸಿ, ದಾಖಲಿಸಬೇಕು ಎನ್ನುವ ಸೂಚನೆ ನೀಡಲಾಯಿತು.
ನೀರಾವರಿ ಇಲಾಖೆ:
ನಮ್ಮ ರೈತರಿಗೆ ಅನ್ಯಾಯ ಮಾಡಿ ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಕೊಡಬೇಕು ಎನ್ನುವ ಸೂಚನೆ ಯಾವ ಆದೇಶದಲ್ಲೂ ಇಲ್ಲ. ನಮ್ಮ ಬೆಳೆ ಮತ್ತು ಕುಡಿಯುವ ನೀರಿನ ರಕ್ಷಣೆ ಮಾಡಿಕೊಳ್ಳಬೇಕು. ಸಂಕಷ್ಟ ಪರಿಹಾರ ಸೂತ್ರ ಇನ್ನೂ ಸಿದ್ದಗೊಳ್ಳಬೇಕಿದೆ.
ಕುಡಿಯುವ ನೀರಿಗೆ ಮತ್ತು ಕೃಷಿಗೆ ಅಗತ್ಯವಾದ ನೀರಿನ ಪ್ರಮಾಣ ಎಷ್ಟು? ನಮ್ಮಲ್ಲಿ ಸಂಗ್ರಹದಲ್ಲಿರುವ ನೀರಿನ ಪ್ರಮಾಣ ಎಷ್ಟು ಎನ್ನುವ ಕುರಿತಾಗಿ ವೈಜ್ಞಾನಿಕ ತಿಳಿವಳಿಕೆ ಮತ್ತು ಮಾಹಿತಿ ಸಿದ್ದವಿಟ್ಟುಕೊಂಡು ನಮ್ಮ ರೈತರ ಹಿತ ಕಾಪಾಡುವುದನ್ನೇ ಮೊದಲ ಆಧ್ಯತೆಯನ್ನಾಗಿ ಕ್ರಮ ವಹಿಸಲು ಸೂಚಿಸಲಾಯಿತು.
ಎಂಜಿನಿಯರ್‌ಗಳು ನಾಲೆ ಮೇಲೆ ತಿರುಗಾಡಿ ನೀರು ಟೈಲ್ ಎಂಡ್ ವರೆಗೂ ತಲುಪುತ್ತಿದೆಯಾ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ನಾಲೆಗೆ ನೀರು ಬಿಡುವ ಮೊದಲು ಹೂಳು ತೆಗೆಯಬೇಕು. ನೀರು ಬಿಟ್ಟ ಬಳಿಕ ಹೂಳು ತೆಗೆಯಲು ಹೋಗಬಾರದು.
ನಾಲೆಗಳಿಗೆ ನೀರು ಬಿಡುವ ಮೊದಲೇ ಮೋಟಾರು ಪಂಪ್‌ಗಳನ್ನು ರಿಪೇರಿ ಮಾಡಿಸಬೇಕು.
ಪಶುಪಾಲನಾ ಇಲಾಖೆ:
- ಕುರಿ ಮತ್ತು ಹಸು ಹಾಗೂ ಎತ್ತುಗಳು ಮೃತಪಟ್ಟಾಗ ಪರಿಹಾರ ಒದಗಿಸಬೇಕು. ಅಗತ್ಯ ಹಣವನ್ನು ಸರ್ಕಾರಕ್ಕೆ ಕೇಳಿ.
- ರಾಸುಗಳಿಗೆ ಅಗತ್ಯ ಔಷಧಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಸಂಭಾವ್ಯ ಕಾಯಿಲೆಗಳಿಗೆ ಔಷಧಿ ರೆಡಿ ಇಟ್ಟುಕೊಂಡಿರಬೇಕು.
- ಪಶುಪಾಲಕರಿಗೆ ಅನುಕೂಲ ಆಗಲಿ ಎನ್ನುವ ಕಾರಣದಿಂದ ನಂದಿನಿ ಹಾಲಿನ ದರವನ್ನು ೩ ರೂ ಹೆಚ್ಚಿಸಿದೆವು. ಈ ೩ ರೂ ಪೂರ್ತಿಯಾಗಿ ನೇರ ರೈತರಿಗೆ ತಲುಪಬೇಕು.
- ರೈತರಿಗೆ ೩ರೂ ಹೆಚ್ಚುವರಿವಾಗಿ ಸಿಕ್ಕ ಮೇಲೆ ನಂದಿನಿಗೆ ಬರುವ ಹಾಲಿನ ಪ್ರಮಾಣ ಹೆಚ್ಚಾಗಿದೆ. ಈಗ ಹಾಲು ಒಕ್ಕೂಟಗಳು ಲಾಭ ಮಾಡಿಕೊಳ್ಳಬೇಕು, ಆ ಲಾಭ ರೈತರಿಗೆ ಸೇರಬೇಕು ಎಂದು ಸೂಚಿಸಿದರು.
• ಹಾಲು ಒಕ್ಕೂಟಗಳಿಗೆ ಮನಸೋ ಇಚ್ಚೆ ನೇಮಕ ಮಾಡಿಕೊಳ್ಳಬಾರದು. ಹೊರ ಗುತ್ತಿಗೆ ಎನ್ನುವುದನ್ನು ದಂಧೆ ಮಾಡಿಕೊಳ್ಳಬಾರದು. ಮೀಸಲಾತಿ ಮಾನದಂಡದಲ್ಲಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ತೋಟಗಾರಿಕಾ ಇಲಾಖೆ:
- ತೆಂಗು, ರೇಷ್ಮೆ ಮತ್ತಿತರ ಬೆಳೆಗಳು ನಾಶ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಸಂಬಂಧಪಟ್ಟ ವಿಜ್ಷಾನಿಗಳ ಜತೆ ಚರ್ಚಿಸಿ ಪರಿಹಾರ ಕಂಡುಕೊಂಡು ಕಾಯಿಲೆ ವ್ಯಾಪಕವಾಗಿ ಆವರಿಸುವ ಮೊದಲೇ ರಕ್ಷಣಾತ್ಮಕ ಕ್ರಮ ಕೈಗೊಳ್ಳಬೇಕು.
ಆರೋಗ್ಯ ಇಲಾಖೆ:
- ಜಿಲ್ಲಾ ಆಸ್ಪತ್ರೆಗಳಲ್ಲಿ ಅಲ್ಟ್ರಾಸೌಂಡ್, ಸಿಟಿ ಸ್ಕ್ಯಾನ್, ಎಂಆರ್ಐ, ಎಕ್ಸ್ರೇ ಸೇರಿ ಎಲ್ಲಾ ತಪಾಸಣಾ ವ್ಯವಸ್ಥೆ ಇರಬೇಕು. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯ ಹಣ ಖರ್ಚೇ ಆಗುತ್ತಿಲ್ಲ. ಹಾಗೇ ಉಳಿದಿದೆ. ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಅಗತ್ಯ ಸಲಕರಣೆಗಳೇ ಇಲ್ಲ ಏಕೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಪ್ರಶ್ನಿಸಿದರು.
- ಜಿಲ್ಲಾ ಆರೋಗ್ಯಾಧಿಕಾರಿಗಳು ತಾಲ್ಲೂಕಾ ಆಸ್ಪತ್ರೆಗಳಿಗೆ ಖುದ್ದಾಗಿ ಭೇಟಿ ನೀಡಬೇಕು. ಭೇಟಿ ನೀಡಿದ ಬಗ್ಗೆ ಡೈರಿ ಬರೆಯಬೇಕು ಎಂದು ಸೂಚಿಸಿದ ಮುಖ್ಯಮಂತ್ರಿಗಳು, ಗ್ರಾಮೀಣ ಭಾಗದಲ್ಲಿ ವೈದ್ಯರಿಗಾಗಿಯೇ ಕಟ್ಟಿಸಿರುವ ಕ್ವಾಟ್ರಸ್ಗಳಿವೆ. ಅಲ್ಲಿ ಏಕೆ ವೈದ್ಯರು ಉಳಿದುಕೊಳ್ಳುತ್ತಿಲ್ಲ. ನೀವು ಏನು ಮಾಡುತ್ತಿದ್ದೀರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
- ಜಿಲ್ಲಾ ಸರ್ಜನ್, ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಮೆಡಿಕಲ್ ಕಾಲೇಜಿನ ಡೀನ್ಗಳಿಗೆ ಪ್ರತ್ಯೇಕ ಜವಾಬ್ದಾರಿಗಳಿರುತ್ತವೆ. ನೀವುಗಳು ನಿಮ್ಮ ಜವಾಬ್ದಾರಿಯನ್ನು ಪರಸ್ಪರ ಹೊಂದಾಣಿಕೆಯಿಂದ ನಿವಹಿಸದೇ ಹೋದರೆ ಆರೋಗ್ಯ ವ್ಯವಸ್ಥೆ ಏರುಪೇರಾಗುತ್ತದೆ. ಹಾಗೇನಾದರೂ ಆದರೆ ನೀವುಗಳೇ ನೇರ ಹೊಣೆ. ಕ್ರಮ ಎದುರಿಸಲು ಸಿದ್ದರಿರಿ ಎಂದು ಮೂವರಿಗೂ ಎಚ್ಚರಿಸಿದರು.
- ಕೆ.ಆರ್.ಆಸ್ಪತ್ರೆಗೆ ನೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಈ ಆಸ್ಪತ್ರೆಯನ್ನು ಉನ್ನತೀಕರಿಸುವುದು ಸೇರಿದಂತೆ ಇನ್ನಿತರೆ ಅಗತ್ಯತತೆಗಳನ್ನು ಪೂರೈಸುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲು ಸೂಚಿಸಲಾಯಿತು.
ನಗರಾಡಳಿತ:
- ಸಿಎ ಸೈಟ್ಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಯಾವ ಉದ್ದೇಶಕ್ಕೆ ಸಿಎ ಸೈಟ್ಗಳನ್ನು ನೀಡಲಾಗಿದೆಯೋ ಅದೇ ಉದ್ದೇಶಕ್ಕೆ ಅದು ಬಳಕೆ ಆಗುತ್ತಿರಬೇಕು. ಇಲ್ಲದಿದ್ದರೆ ತಕ್ಷಣ ಅಂತಹ ಸೈಟ್ಗಳನ್ನು ವಾಪಾಸ್ ವಶಕ್ಕೆ ಪಡೆಯಬೇಕು ಎಂದು ಮೂಡಾ ಆಯುಕ್ತರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
- ಮೈಸೂರು ಕ್ಲೀನ್ ಸಿಟಿಯಾಗಿ ಇನ್ನಷ್ಟು ಉನ್ನತೀಕರಿಸುವ ನಿಟ್ಟಿನಲ್ಲಿ ಪಾಲಿಕೆ, ಮೂಡ, ಅರಣ್ಯ, ಕುಡಿಯುವ ನೀರು ಸರಬರಾಜು ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಟ್ಟಾಗಿ ಬಸ್ನಲ್ಲಿ ನಗರ ಪ್ರದಕ್ಷಿಣೆ ಮಾಡಿ ಪರಸ್ಪರ ಹೊಂದಾಣಿಕೆಯಿಂದ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಿಚಿವರ ನೇತೃತ್ವದಲ್ಲೇ ಇದು ನಡೆಯಬೇಕು ಎಂದು ಸೂಚಿಸಿದರು.
- ಹೊಸ ಬಡಾವಣೆಗಳಿಗೆ ಕಣ್ಣುಮುಚ್ಚಿಕೊಂಡು ಅನುಮತಿ ನೀಡಬಾರದು. ಮೈಸೂರಿನಲ್ಲೂ ಬೆಂಗಳೂರಿನಂತೆ ಅಕ್ರಮ ಬಡಾವಣೆಗಳು ಮತ್ತು ಅವೈಜ್ಞಾನಿಕ ಬಡಾವಣೆಗಳು, ಅಗತ್ಯ ಸೌಲತ್ತುಗಳಿಲ್ಲದ ಬಡಾವಣೆಗಳು ನಿರ್ಮಾಣವಾಗದಂತೆ ಕಟ್ಟುನಿಟ್ಟಾಗಿ ತಡೆಯಬೇಕು.
ಶಿಕ್ಷಣ:
- ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಹಿಂದುಳಿದಿರುವುದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, ಬಿಇಒ ಕಚೇರಿಗಳಿಗೆ ಮತ್ತು ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಬೇಕು. ರಾಜ್ಯದ ಮೊದಲ ವಿಶ್ವ ವಿದ್ಯಾಲಯ ಆರಂಭವಾಗಿದ್ದು ಮೈಸೂರಿನಲ್ಲಿ. ಇಂಥಾ ಜಿಲ್ಲೆ ಶಿಕ್ಷಣ ಸೂಚ್ಯಂಕದಲ್ಲಿ ಹಿಂದುಳಿಯಬಾರದು ಎಂದು ಸೂಚನೆ ನೀಡಿದರು.
- ಶೂನ್ಯ ದಾಖಲಾತಿ ಶಾಲೆಗಳ ವ್ಯಾಪ್ತಿಯ ಪೋಷಕರ ಸಭೆ ನಡೆಸಬೇಕು. ಪೋಷಕರ ಅಭಿಪ್ರಾಯವನ್ನು ಸಮಗ್ರವಾಗಿ ಸಂಗ್ರಹಿಸಿ ಕ್ರಮ ತೆಗೆದುಕೊಳ್ಳಬೇಕು. ಕೇವಲ ಇಂಗ್ಲಿಷ್ ವ್ಯಾಮೋಹದಿಂದ ಸರ್ಕಾರಿ ಶಾಲೆಗಳಿಗೆ ಸೇರುತ್ತಿಲ್ಲ ಎನ್ನುವ ವಾದ ವೈಜಾನಿಕವಲ್ಲ. ಶಿಕ್ಷಣದ ಗುಣಮಟ್ಟವೂ ಕಾರಣ ಆಗಿರುತ್ತದೆ. ಆದ್ದರಿಂದ ಗುಣಮಟ್ಟದ ಶೀಕ್ಷಣ ಹೆಚ್ಚಿಸಲು ಶಿಕ್ಷಕರಿಗೆ ತರಬೇತಿ ನೀಡುವುದೂ ಸೇರಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿ, ಮುಂದಿನ ವರ್ಷ ಶಿಕ್ಷಣ ಸೂಚ್ಯಂಕದಲ್ಲಿ ಮೊದಲ ಐದು ಸ್ಥಾನಗಳ ಒಳಗೆ ಬರಬೇಕು. ಇಲ್ಲದಿದ್ದರೆ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.
ಇಂಧನ ಇಲಾಖೆ:
- ಹಾಳಾದ ಟ್ರಾನ್ಸ್ಫಾರ್ಮರ್ ಗಳನ್ನು ನಿಗಧಿತ ಅವಧಿಯಲ್ಲಿ ಬದಲಾಯಿಸದೆ ರೈತರಿಗೆ ಸತಾಯಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಮೆಸ್ಕಾಂ ಎಂಡಿ ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, ನೀವು ರೈತರ ಮತ್ತು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನೇ ಸ್ವೀಕರಿಸುತ್ತಿಲ್ಲ. ರೈತರು ಬಹಳ ಸಂಕಷ್ಟದಲ್ಲಿ ಇದ್ದಾರೆ. ಅವರಿಗೆ ಸತಾಯಿಸಬೇಡಿ ಎಂದು ಎಚ್ಚರಿಕೆ ನೀಡಿದರು.
- ಟ್ರಾನ್ಸ್ಫಾರ್ಮರ್ ಸುಟ್ಟು ಹೋದರೆ ನಿಗಧಿತ ಅವಧಿ ೭೨ ಗಂಟೆಯೊಳಗೆ ರಿಪೇರಿ ಮಾಡಬೇಕು ಎಂದು ಖಡಕ್ ಸೂಚನೆ ನೀಡಿದರು.
ಕುಡಿಯುವ ನೀರು:
- ಕುಡಿಯುವ ನೀರಿಗೆ ಕೊರತೆ ಆಗದಂತೆ ಅಗತ್ಯ ಎಲ್ಲಾ ಕ್ರಮ ಕೈಗೊಳ್ಳಬೇಕು. ಎಷ್ಟೇ ಹಣ ಖರ್ಚಾದರೂ ಕೊಡಲು ನಾವು ಸಿದ್ದರಿದ್ದೇವೆ. ಕುಡಿಯುವ ನೀರಿನ ವಿಚಾರದಲ್ಲಿ ಪರ್ಯಾಯ ನೀರಿನ ಮೂಲಗಳನ್ನು ಬಳಸಲು ಯಾವುದೇ ಅಡ್ಡಿ ಆಗಬಾರದು ಎಂದು ಸ್ಪಷ್ಟ ಸೂಚನೆ ನೀಡಿದರು.
ಸಾರಿಗೆ ಇಲಾಖೆ:
- ಕೊರೋನ ಅವಧಿಯಲ್ಲಿ ಬಂದ್ ಆಗಿರುವ ಬಸ್ ಮಾರ್ಗಗಳು ಪುನರ್ ಚಾಲನೆ ಆಗುವುದೂ ಸೇರಿದಂತೆ ಐದು ಜಿಲ್ಲೆಗಳ ಶಾಸಕರ ಸಭೆ ಕರೆದು ಹೊಸ ಬಸ್ ಮಾರ್ಗಗಳ ಅಗತ್ಯ ಎಲ್ಲೆಲ್ಲಿ ಇವೆ ಎನ್ನುವುದರ ಬಗ್ಗೆ ಸಮಗ್ರವಾಗಿ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸುಳ್ಳು ಸುದ್ದಿಗಳಿಗೆ ಬ್ರೇಕ್:
- ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರು, ಶಾಂತಿ ಕದಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು.
- ಸುಳ್ಳು ಸುದ್ದಿ ಹರಡುವವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಜೈಲಿಗೆ ತಳ್ಳಿ.
- ಡ್ರಗ್ಸ್ ವಿಚಾರದಲ್ಲಿ ಮೈಸೂರು ವಲಯದಲ್ಲಿ ಝೀರೋ ಟಾಲರೆನ್ಸ್ ಇರಬೇಕು.
- ಮೈಸೂರು ಸಾಂಸ್ಕೃತಿಕ ನಗರಿ. ಇಲ್ಲಿ ಡ್ರಗ್ಸ್ ಮೇನಿಯಾ, ಮಾಫಿಯಾಗೆ ಅವಕಾಶ ಇರಬಾರದು.
- ೩೧ರ ಗೃಹ ಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮದ ವೇಳೆ ಸಾರ್ವಜನಿಕರಿಗೆ ಟ್ರಾಫಿಕ್ ಕಿರಿಕಿರಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎನ್ನುವ ಸೂಚನೆ ನೀಡಿದರು.
ಆದಿವಾಸಿ:
ಆದಿವಾಸಿಗಳಿಗೆ ೪ ತಿಂಗಳಿಂದ ಆಹಾರ ನೀಡುತ್ತಿಲ್ಲ ಎನ್ನುವ ವರದಿಗೆ ಸಂಬಂಧಪಟ್ಟಂತೆ ಗರಂ ಆದ ಮುಖ್ಯಮಂತ್ರಿಗಳು ನಿಮಗೆ ಆರು ತಿಂಗಳು ಸಂಬಳ ನಿಲ್ಲಿಸಿದರೆ ಏನಾಗುತ್ತದೆ ಎನ್ನುವ ಪ್ರಜ್ಞೆ ಇದೆಯೇ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕಾರಿನಲ್ಲಿ ಓಡಾಡುವವರು ಮಾಲೀಕರಲ್ಲ: ಬರಿಗಾಲಿನಲ್ಲಿ ಓಡಾಡುವವರು ನನ್ನ ಮಾಲೀಕರು:
ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ, ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ? ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.
ಜನರಿಗೆ ಅಧಿಕಾರಿ-ಸಿಬ್ಬಂದಿ ಕೈಗೆ ಸಿಗಬೇಕು. ಖಾತೆ ಮಾಡಿಸಿಕೊಳ್ಳಲು, ಜಾತಿ ಪ್ರಮಾಣ ಪತ್ರಕ್ಕೆ ಜನ ವಿಧಾನಸೌಧಕ್ಕೆ ಬರಬೇಕಾ ? ಜನರೇ ನಮ್ಮ ಮಾಲೀಕರು. ನಾವು ಜನಗಳ ಸೇವಕರು. ಜನರ ಹಣದಲ್ಲಿ ನಿಮಗೆ, ನಮಗೆ ಎಲ್ಲಾ ರೀತಿಯ ಸವಲತ್ತುಗಳು ಸಿಗುತ್ತಿವೆ. ಹೀಗಾಗಿ ಜನರನ್ನು ಸಣ್ಣ ಪುಟ್ಟ ಕೆಲಸಕ್ಕೆ ಸರ್ಕಾರಿ ಕಚೇರಿಗಳಿಗೆ ಅಲೆಸದಂತೆ ಕೆಲಸ ಮಾಡಬೇಕು. ಜನ ಸಣ್ಣ ಕೆಲಸಗಳಿಗೆ ವಿಧಾನಸೌಧಕ್ಕೆ ಬರುತ್ತಾರೆ ಎಂದರೆ, ನನ್ನನ್ನು ಹುಡುಕಿಕೊಂಡು ಬರುತ್ತಾರೆ ಎಂದರೆ ನೀವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದೇ ಅರ್ಥ. ಇದು ನಿಮಗೆ ಸರಿಯಾಗಿ ಅರ್ಥ ಮಾಡಿಕೊಳ್ಳದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.
ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು. ಕಾರಿನಲ್ಲಿ ಓಡಾಡುವ ಅಧಿಕಾರಿಗಳು ಬರಿ ಗಾಲಿನಲ್ಲಿ ಬರುವವರನ್ನು ಗೌರವದಿಂದ ಕಾಣಬೇಕು. ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಿ ಕೊಡಬೇಕು ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.
ಮೊದಲು ನನ್ನ ಜಿಲ್ಲೆಯಲ್ಲಿ ಜಿಲ್ಲಾಡಳಿತ ಇನ್ನಷ್ಟು ಚುರುಕಾಗಬೇಕು. ನಿಯಮಬದ್ದವಾಗಿ, ಕಾಲ ಮಿತಿಯಲ್ಲಿ ಕೆಲಸ ಮಾಡದಿದ್ದರೆ ಅದನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನ ಯಾವ ನಿರೀಕ್ಷೆ ಇಟ್ಟುಕೊಂಡು ಸರ್ಕಾರವನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಿ. ಮೈಸೂರು ಜಿಲ್ಲೆ ಶಿಕ್ಷಣ ಸೂಚ್ಯಂಕದಲ್ಲಿ 16 ನೇ ಸ್ಥಾನದಲ್ಲಿದೆ ಎಂದರೆ ನಾಚಿಕೆಗೇಡು. ಇದನ್ನು ನಾನು ಸಹಿಸಲ್ಲ. ಶಿಕ್ಷಣ, ಆರೋಗ್ಯ ಸೂಚ್ಯಂಕ ಸೇರಿ ಎಲ್ಲಾ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಮೈಸೂರು ಮಾದರಿ ಜಿಲ್ಲೆಯಾಗಲೇಬೇಕು. ಆ ರೀತಿ ದಕ್ಷತೆ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಿ ಎಂದು ಎಲ್ಲಾ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಆರು ತಿಂಗಳ ಬಳಿಕ ಮತ್ತೆ ಕೆಡಿಪಿ ಸಭೆ ನಡೆಸುತ್ತೇನೆ. ಅಷ್ಟರೊಳಗೆ ಪರಿಸ್ಥಿತಿ ಸುಧಾರಿಸಬೇಕು. ಪ್ರಗತಿಯ ವೇಗ ಹೆಚ್ಚಾಗಬೇಕು. ಇಲ್ಲದಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೊಣೆ ಮಾಡುತ್ತೇನೆ. ಪ್ರೀ ಮೆಚೂರ್ ಎನ್ನುವುದನ್ನೂ ನೋಡದೆ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಮಳೆಯ ಅಭಾವ ಇರುವುದರಿಂದ ಜನರು, ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಹೆಚ್ಚಿನ ರೀತಿಯಲ್ಲಿ ಸ್ಪಂದಿಸಿ ಎಂದು ಸೂಚಿಸಿದರು.
ಇನ್ಸ್ ಪೆಕ್ಟರ್ ಗಳ ಅರಿವಿಗೆ ಬಾರದಂತೆ ಅವರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯಲು ಸಾಧ್ಯವೇ ಇಲ್ಲ. ಈ ಬಗ್ಗೆ ಡಿಸಿಪಿ ಗಳು, ಎಸ್ ಪಿ ಗಳು ಎಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.
**********