ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸರಳ, ಸಾಂಪ್ರದಾಯಿಕ ದಸರಾ ಆಚರಣೆ: ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ

know_the_cm

(ವಿಧಾನಸೌಧ, ಬೆಂಗಳೂರು), ಸೆಪ್ಟೆಂಬರ್ 03, 2021

-ಕೋವಿಡ್ 19 ಹಿನ್ನೆಲೆಯಲ್ಲಿ ಈ ವರ್ಷವೂ ಸರಳವಾಗಿ, ಸಾಂಪ್ರದಾಯಿಕವಾಗಿ ದಸರಾ ಆಚರಿಸಲು ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

-ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಹಾಗೂ ಮೈಸೂರು ಅರಮನೆ ಆವರಣದಲ್ಲಿ ಜಂಬೂ ಸವಾರಿ, ಹತ್ತು ದಿನಗಳ ದೀಪಾಲಂಕಾರ ಮೊದಲಾದ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು. ಮೈಸೂರು, ಚಾಮರಾಜನಗರ ಹಾಗೂ ಶ್ರೀರಂಗಪಟ್ಟಣದಲ್ಲಿ ದಸರಾ ಆಚರಣೆ ನಡೆಸಲು ಆರು ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.

-ದಸರಾ ಉತ್ಸವ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಮಿತಿಯು ಮುಖ್ಯಮಂತ್ರಿಗಳಿಗೇ ನೀಡಿತು.

-2019ರ ದಸರಾ ಉತ್ಸವಕ್ಕೆ ಸಂಬಂಧಿಸಿದಂತೆ ಪಾವತಿಗೆ ಬಾಕಿ ಇರುವ 8.09 ಕೋಟಿ ರೂ. ಅನುದಾನ ಒದಗಿಸಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ವರ್ಷದಿಂದ ಸರ್ಕಾರ ಒದಗಿಸಿದ ಮೊತ್ತದಲ್ಲಿಯೇ ದಸರಾ ನಡೆಸಲು ಹಾಗೂ ದಸರಾ ಉತ್ಸವದ ಖರ್ಚುವೆಚ್ಚದಲ್ಲಿ ಶಿಸ್ತು ಪಾಲಿಸಿ, ಲೆಕ್ಕಪತ್ರವನ್ನು ಸಮರ್ಪಕವಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

-ಜನಪ್ರತಿನಿಧಿಗಳು ಪ್ರವಾಸೋದ್ಯಮ ಉತ್ತೇಜನ ನೀಡಲು ಪ್ರವಾಸೋದ್ಯಮ ಸರ್ಕ್ಯುಟ್ ಮಾಡುವಂತೆ ಕೋರಿದ್ದಾರೆ. ರಾಜ್ಯದಲ್ಲಿ ಹಂಪಿ, ಬದಾಮಿ, ವಿಜಯಪುರ ಹೀಗೆ ವಿವಿಧ ಪ್ರವಾಸೋದ್ಯಮ ಸರ್ಕ್ಯುಟ್ ಗಳು ಇವೆ. ಪ್ರಸ್ತುತ ಜಾರಿಯಲ್ಲಿರುವ ಪ್ರವಾಸೋದ್ಯಮ ನೀತಿಯಡಿ ಲಭ್ಯವಿರುವ ಅವಕಾಶಗಳು ಹಾಗೂ ಇತರ ಕ್ರಮಗಳು ಕೈಗೊಳ್ಳುವ ಬಗ್ಗೆ ಪ್ರವಾಸೋದ್ಯಮ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

-ಮೈಸೂರು ದಸರಾ ಮತ್ತು ಪ್ರವಾಸೋದ್ಯಮದಿಂದ ನಡೆಯುತ್ತಿದ್ದ ಆರ್ಥಿಕ ಚಟುವಟಿಕೆಗಳು ಕೋವಿಡ್ ನಿಂದಾಗಿ ಕುಂಠಿತಗೊಂಡಿವೆ. ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಉತ್ತೇಜನ ನೀಡುವ ಕುರಿತು ಚಿಂತನೆ ನಡೆಸಲಾಗುವುದು.

-ದಸರಾ ಹಿನ್ನೆಲೆಯಲ್ಲಿ ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಅಗತ್ಯವಿರುವ ಮೂಲಸೌಲಭ್ಯ ಅಭಿವೃದ್ಧಿ ಕುರಿತಂತೆ ಅಂದಾಜು ಪಟ್ಟಿಯೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

-ಸಭೆಯಲ್ಲಿ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸರ್ಕಾರದ ಮುಖ್ಯ ಪಿ. ರವಿಕುಮಾರ್, ಸಂಸದರು, ಶಾಸಕರು ಮತ್ತಿತರ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

*************